ಮತ್ತೆ ಫುಟ್‌ಪಾತ್‌ ಆಕ್ರಮಿಸಿದರೆ ದುಪ್ಪಟ್ಟು ದಂಡ, ಸಾಮಗ್ರಿ ಜಪ್ತಿ

ಬೆಂಗಳೂರು: ರಾಜಧಾನಿಯಲ್ಲಿ ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ಮತ್ತೆ ಆಕ್ರಮಿಸಿಕೊಂಡು ವ್ಯಾಪಾರ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಸೇಫ್ ಫುಟ್‌ಪಾತ್’ ಅಭಿಯಾನದಡಿ ಶಿವಾಜಿನಗರ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿತ್ತು. ಆದರೆ, ಕೆಲವೆಡೆ ವ್ಯಾಪಾರಿಗಳು ಮತ್ತೆ ಫುಟ್‌ಪಾತ್‌ ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಬುಧವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಸಚಿವರು, ಮತ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವವರ ಸಾಮಗ್ರಿಗಳನ್ನು ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಸುಮಾರು 1,500 ಕಿ.ಮೀ. ಉದ್ದದ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದೆ.

ಉಳಿದ ಒತ್ತುವರಿಯನ್ನು ಆಗಸ್ಟ್ ಅಂತ್ಯದೊಳಗೆ ತೆರವುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *